- ಕರ್ನಾಟಕದ ಸಚಿವ ಸಂತೋಷ್ ಲಾಡ್
- ರಕ್ಷಣಾ ಕಾರ್ಯದಲ್ಲಿ ಪಾಲ್ಗೋಂಡಿದ್ದಾರೆ
- ಸಿದ್ದರಾಮಯ್ಯ ಮೇಲ್ವಿಚಾರಣೆ ನಡೆತ್ತಿದ್ದಾರೆ
ನ್ಯೂಜ್ ಡೆಸ್ಕ್: ವಯನಾಡಿನಲ್ಲಿ ಸುರಿದ ರಣ ಭೀಕರ ಮಳೆಯಿಂದಾಗಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ,ಈ ಸಂದಿಗ್ದಸ್ಥಿಯಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತ ಹಿನ್ನಲೆಯಲ್ಲಿ ಅವರನ್ನು ರಕ್ಷಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸೂಚನೆ ನೀಡಿದ ಮೇರೆಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ,ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ತೊಡಗಿಸಿಕೊಂಡಿದ್ದಾರೆ.
ವಯನಾಡಿಗೆ ಹೋಗಿರುವ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ನೀಡಿರುವ ಸೂಚನೆಯಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯಕೇರಳ ಸಿಎಂ ಜೊತೆಗೆ ಚರ್ಚೆ
ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್ ಅವರನ್ನು ಮಾತನಾಡಿದ ಸಿದ್ದರಾಮಯ್ಯ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿ ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾನಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದ್ದು ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.
ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಹೆಚ್.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ಹೋಗಿಬರುವಂತ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.
ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ಸಿ. ಜಾಫರ್ (ಮೊಬೈಲ್ ಸಂಖ್ಯೆ 9448355577) ಹಾಗೂ ದಿಲೀಶ್ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.